Wed, May 14, 2025
ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ 'ಭಾರತ ರತ್ನ' ಘೋಷಣೆ
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ "ಭಾರತ ರತ್ನ" ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಫೆ. 3ರಂದು ಮಾಹಿತಿ ಹಂಚಿಕೊಂಡಿದ್ದಾರೆ. ಎಲ್.ಕೆ. ಅಡ್ವಾಣಿ ಅವರು ಭಾರತ ರತ್ನ ಗೌರವಕ್ಕೆ ಭಾಜನರಾಗಿರುವುದರಿಂದ ನನಗೆ ಬಹಳ ಸಂತೋಷವಾಗಿದೆ. ಈಗಾಗಲೇ ಅವರೊಂದಿಗೆ ಮಾತನಾಡಿ, ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ಉಪ ಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಅಡ್ವಾಣಿಯವರ ದಶಕಗಳ ಸುದೀರ್ಘ ಸೇವೆಯು ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ಅವರು ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ವಿಚಾರದಲ್ಲಿ ದೇಶಕ್ಕೆ ಕೊಡುಗೆ ಸಲ್ಲಿಸಲು ಅಪ್ರತಿಮ ಪ್ರಯತ್ನ ಮಾಡಿದ್ದಾರೆ. ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುವುದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣ. ಅವರೊಂದಿಗೆ ಸಂವಹನ ನಡೆಸಲು ಮತ್ತು ಕಲಿಯಲು ನನಗೆ ಅಸಂಖ್ಯಾತ ಅವಕಾಶಗಳು ಸಿಕ್ಕಿರುವುದು ನನ್ನ ಪುಣ್ಯ ವಿಶೇಷ ಎಂದು ನಾನು ಯಾವಾಗಲೂ ಪರಿಗಣಿಸುತ್ತೇವೆ ಎಂದು ಮೋದಿ ಉಲ್ಲೇಖಿಸಿದ್ದಾರೆ.