ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ
Published Date: 22-Jun-2024 Link-Copied
ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ತರಬೇತಿ ತಂಡಗಳ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡುತ್ತಾ ರುಡ್‌ಸೆಟ್ ಸಂಸ್ಥೆಗಳ ತರಬೇತಿಯಲ್ಲಿ ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಬಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು. ಇದರಿಂದ ಸ್ವಂತ ಉದ್ಯೋಗ ಪ್ರಾರಂಭಿಸಲು ಅನುಕೂಲವಾಗುತ್ತದೆ. ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ ಹಾಗೂ ಉದ್ಯಮಿಗಳು ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಂಡಾಗ ಲಾಭ ನಷ್ಟಗಳ ವಿವರ ದೊರೆಯುತ್ತದೆ ಎಂದು ಹೇಳಿದರು. ತರಬೇತಿ ಪಡೆದ ಎಲ್ಲರಿಗೂ ಶುಭ ಹಾರೈಸಿ ಆರ್ಶೀವದಿಸಿದರು. ಈ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕರಾದ ರಂಜನ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ. ಎನ್. ಜನಾರ್ಧನ್, ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ ಬಿ. ಪಿ. ಉಪಸ್ಥಿತರಿದ್ದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್ ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಕೆ. ಕರುಣಾಕರ ಜೈನ್ ವಂದಿಸಿದರು. ತರಬೇತಿಯಲ್ಲಿ ಒಟ್ಟು 65 ಜನ ಅಭ್ಯರ್ಥಿಗಳು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.