ಬೆಂಗಳೂರು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Published Date: 27-Apr-2024 Link-Copied
ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ 76 ಮೋಟಾರು ವಾಹನ ನಿರೀಕ್ಷಕರ ನೇಮಕಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿದೆ. ಮೊದಲೇ ನಿಗದಿಯಾಗಿದ್ದಂತೆ ಏ.22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವಿಳಂಬವಾಗುತ್ತಿರುವುದರಿಂದ ಕೊನೆಯ ದಿನಾಂಕವನ್ನು ಮೇ 21ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಡಾ.ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಾಹನ ಚಾಲನಾ ಪರವಾನಗಿ (ಡಿಎಲ್)ಗೆ ಸಂಬಂಧಿಸಿದ ಅರ್ಜಿಯಲ್ಲಿ ಡಿಎಲ್ ಸಂಖ್ಯೆ ನಮೂದಿಸಿದಾಗ ಅದರ ಸಂಪೂರ್ಣ ಮಾಹಿತಿ ಎಪಿಐ ತಂತ್ರಾಂಶದ ಮೂಲಕ ಅರ್ಜಿಯಲ್ಲಿ ಬರುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಅದು ತಾಂತ್ರಿಕ ಕಾರಣದಿಂದ ವಿಳಂಬವಾಗುತ್ತಿರುವುದರಿಂದ ಅರ್ಜಿ ಸಲ್ಲಿಸುವ ಕಾಲಮಿತಿ ವಿಸ್ತರಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.