ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ಜಿಲ್ಲಾ ಸಂಸ್ಥೆ: ಸಮಾಲೋಚನಾ ಕಾರ್ಯಾಗಾರ
Published Date: 04-Jul-2024 Link-Copied
ಮೂಡುಬಿದಿರೆ: ದೇಶದ 142 ಕೋಟಿ ಜನಸಂಖ್ಯೆಯಲ್ಲಿ 50 ಕೋಟಿಯವರೆಗೆ ವಿದ್ಯಾರ್ಥಿಗಳು ಇರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಜಿಲ್ಲಾ ಆಯುಕ್ತರಾದ ಡಾ. ಎಂ. ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಬುಧವಾರ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳ ಸಮಾಲೋಚನಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ವಿದ್ಯೆ ಹಾಗೂ ಬುದ್ಧಿಯನ್ನು ಬೆಳೆಸುವುದರ ಜೊತೆಗೆ ಒಂದು ಒಳ್ಳೆಯ ಮನಸ್ಸನ್ನು ಕಟ್ಟುವ ಅವಶ್ಯಕತೆ ಇದೆ. ಇದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ನೆರವೇರಿಸಲು ಸಾಧ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇರುವ ಅವಕಾಶಗಳು ಅಪಾರ. ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಪಸರಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲವಾಗಿ ಮೂಡುವ ಅವಶ್ಯಕತೆ ಇದೆ. ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ರೀತಿಯ ಕೊರತೆ ಇರದಂತೆ ನೋಡಿಕೊಳ್ಳುವ ಜವಾಬ್ದಾರಿ ಅಲ್ಲಿನ ಸಿಬ್ಬಂದಿಯದ್ದು. ಇದರಿಂದ ನಮ್ಮ ಜಿಲ್ಲೆಯು ದೇಶಕ್ಕೆ ಮಾದರಿಯಾಗಲಿದೆ ಎಂದರು. ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರಾದ ಸಿ. ಡಿ. ಜಯಣ್ಣ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಕಾಲೇಜು ಹಾಗೂ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ನಾನು ಸ್ಕೌಟ್ಸ್ ಮತ್ತು ಗೈಡ್ಸ್ ಅನ್ನು ಪಸರಿಸುವ ಧ್ಯೇಯದ ಸಭೆಯನ್ನು ಆಯೋಜಿಸುತ್ತೇನೆ ಎಂದು ಭರವಸೆ ನೀಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ. ಜಿ. ಆರ್ ಸಿಂಧ್ಯ ಮಾತನಾಡಿ, ರಾಜ್ಯದ ಶಿಕ್ಷಣ ಕ್ಷೇತ್ರದ ಸಿಬ್ಬಂದಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡುವಲ್ಲಿ ಸಹಕಾರಿಯಾಗಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಯಾವುದೇ ರೀತಿಯ ಸಂಭಾವನೆ ನೀಡದೆ ಇದ್ದರೂ, ನಮ್ಮ ಸಿಬ್ಬಂದಿ ಯಾವುದೇ ಅಪೇಕ್ಷೆ ಇಲ್ಲದೆ ತಮ್ಮ ಅಮೂಲ್ಯ ಸಮಯವನ್ನು ಸಮರ್ಪಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು. ದೇಶದಲ್ಲೇ ಸ್ಥಳೀಯ ಸಂಸ್ಥೆಯೊಂದಕ್ಕೆ ಇಷ್ಟು ಸುಲಲಿತವಾದ ಕಾರ್ಯಾಲಯ ಇರುವುದು ಮೂಡುಬಿದಿರೆಯಲ್ಲಿ ಮಾತ್ರ, ಇದು ಡಾ ಎಂ ಮೋಹನ ಆಳ್ವರ ಮಾರ್ಗದರ್ಶನದಿಂದ ಸಾಧ್ಯವಾಗಿದೆ. ಎಲ್ಲಾ ಪಕ್ಷ, ಜಾತಿ, ಧರ್ಮಗಳೂ ಪ್ರೀತಿಸುವ ವ್ಯಕ್ತಿ ಡಾ. ಎಂ. ಮೋಹನ ಆಳ್ವ ಅವರಿಂದ ನಮಗೆ ಹೆಚ್ಚಿನ ಶಕ್ತಿ ಬಂದಿದೆ ಎಂದು ಹೇಳಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ2024-25ನೇ ಸಾಲಿನಲ್ಲಿ ನಡೆಯಲಿರುವ ಚಟುವಟಿಕೆಗಳ ಪುಸ್ತಕ ಬಿಡುಗಡೆ ಮಾಡಲಾಯಿತು. ಜಿಲ್ಲಾ ಸ್ಕೌಟ್ಸ್ ಆಯುಕ್ತರಾದ ಬಿ. ಎನ್ ತುಂಬೆ ಸ್ವಾಗತಿಸಿ, ರಾಜ್ಯ ಸಂಘಟನಾ ಆಯುಕ್ತರಾದ ಎಂ ಪ್ರಭಾಕರ ಭಟ್ ವಂದಿಸಿ, ಜಿಲ್ಲಾ ಕೋಶಾಧಿಕಾರಿಗಳಾದ ನವೀನ್‌ಚಂದ್ರ ಅಂಬೂರಿ ನಿರೂಪಿಸಿದರು.